Header Ads Widget

Whats-App-Image-2024-05-08-at-4-44-56-PM-4

ಶಿರ್ವ: ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ...!!

ಶಿರ್ವ: ಕಾಪು ಸಮೀಪದ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರಾತ್ರಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಾಯಗೊಂಡ ವ್ಯಕ್ತಿ ನದಿಯಲ್ಲಿ ಮರಳುಗಾರಿಕೆ ನಡೆಸುವ ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55 ವ) ಎನ್ನಲಾಗಿದೆ.

ಇವರು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್‌ ಅವರ ಮನೆ ಬಳಿಯ ಕಲ್ಲೊಟ್ಟು ಸಂತೋಷ್‌ ಪೂಜಾರಿ ಅವರ ಮನೆಯ ವರಾಂಡದಲ್ಲಿ ಮಲಗಿದ್ದು, ರಾತ್ರಿ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ. ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದ್ದು ರಕ್ತದ ಕೋಡಿ ಹರಿದಿದೆ. ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ.ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ಚಿರತೆ ಓಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕಳೆದೆರಡು ದಿನಗಳಲ್ಲಿ ಕಲ್ಲೊಟ್ಟು ಸಂಗೀತಾ ನಾಯ್ಕ ಅವರ ಮನೆಯ ಎರಡು ಸಾಕು ನಾಯಿಗಳನ್ನು ಚಿರತೆ ಬೇಟೆಯಾಡಿ ನಾಯಿಗಳೆರಡನ್ನೂ ತಿಂದು ಹಾಕಿದೆ ಎಂದು ಮಾಹಿತಿ ತಿಳಿಯಲಾಗಿದೆ.

Post a Comment

0 Comments